ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನಂತರ ಬಾಂಗ್ಲಾದೇಶ ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ. ದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಘೋಷಿಸಿದ್ದಾರೆ. ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಜೊತೆಗೆ ಪ್ರತಿಭಟನಾಕಾರರು ಶಾಂತಿಯ ಹಾದಿಗೆ ಮರಳುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಶೇಖ್ ಹಸೀನಾ ದೇಶ ತೊರೆದಿದ್ದಾರೆ ಎಂದು ಹೇಳಿದರು. ಇನ್ನು ಪ್ರಧಾನಿ ದೇಶ ತೊರೆದಿದ್ದಾರೆ ಎನ್ನುವ ವಿಚಾರ ತಿಳಿದ ಬಳಿಕ ಪ್ರತಿಭಟನಾಕಾರರು ಪ್ರಧಾನಿ ಕಚೇರಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಒಟ್ಟಾರೆಯಲ್ಲಿ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿಗೆ ಒತ್ತಾಯಿಸಿ ನಡೆದ ಹಿಂಸಾಚಾರದಲ್ಲಿ ಕೊನೆಗೂ ಬಾಂಗ್ಲಾದೇಶ ಪ್ರಧಾನಮಂತ್ರಿ ತಲೆದಂಡವಾಗಿದೆ. ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಓಡಿಹೋಗಿದ್ದಾರೆ.