ನವದೆಹಲಿ: ‘ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ 40% ಸರ್ಕಾರ ಎಂದು ಭ್ರಷ್ಟಾಚಾರದ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ. ಆದರೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಎರಡೇ ತಿಂಗಳಲ್ಲಿ ಭ್ರಷ್ಟಾಚಾರ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ’ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಂಡತುಂಡವಾಗಿ ಹೇಳಿದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಕರ್ನಾಟಕ ಕಾಂಗ್ರೆಸ್ ನಾಯಕರ ಜತೆ ದೆಹಲಿಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜ್ಯ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಬಿಜೆಪಿ ವಿರುದ್ಧ ನಾವು ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ಈಗ ನಮ್ಮ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಬಂದರೆ ಹೇಗೆ? ನಾವು ಭ್ರಷ್ಟಾಚಾರದ ಆರೋಪವನ್ನು ಸಹಿಸಲು ಸಾಧ್ಯವೇ ಇಲ್ಲ. ಭ್ರಷ್ಟಾಚಾರ ಆರೋಪವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ ನೀಡಿದ್ದಾರೆ.