ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಕುರಿತು ನಡೆಯುತ್ತಿರುವ ಚರ್ಚೆಯ ವಿಚಾರವಾಗಿ ಮಾತನಾಡಿದ ರಾಯಚೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಅಂತ ಸಂಸದ ಪ್ರತಾಪ್ ಸಿಂಹ ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಸ್ಥಳೀಯ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳ ಶಿಫಾರಸುಗಳನ್ನು ಆಧರಿಸಿ ಟಿಕೆಟ್ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಯಾವುದೇ ವೈಯಕ್ತಿಕ ಆಯ್ಕೆಯನ್ನು ಆಧರಿಸಿ ಅಲ್ಲ. ಈಗಾಗಲೇ ಪಕ್ಷದ ವತಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ರಾಜ್ಯ ನಗರಾಭಿವೃದ್ಧಿ ಸಚಿವ ಸುರೇಶ ಬಿಎಸ್ (ಬೈರತಿ) ಅವರನ್ನು ನೇಮಿಸಲಾಗಿದೆ. ಸುರೇಶ್ ಅವರು ಸಂಭಾವ್ಯ ಅಭ್ಯರ್ಥಿಗಳ ವರದಿಯನ್ನು ಸಲ್ಲಿಸಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.