ಜೈಪುರ : ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಬೀದಿ ನಾಯಿಗಳಿಗೆ ಹೋಲಿಸುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿವಾದಕ್ಕೆ ಗುರಿಯಾಗಿದ್ದಾರೆ. ನಿನ್ನೆ ಗುರುವಾರ, ಜಾರಿ ನಿರ್ದೇಶನಾಲಯ ಜೈಪುರ ಮತ್ತು ಸಿಕರ್‌ನಲ್ಲಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ನಿವಾಸ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದು, ಆಪಾದಿತ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮತ್ತು ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಗನಿಗೆ ಸಮನ್ಸ್ ನೀಡಲಾಗಿದೆ. ಈ ಕುರಿತು ಇಂದು ಹೇಳಿಕೆ ನೀಡಿರುವ ರಾಜಸ್ಥಾನ ಸಿಎಂ ಗೆಹ್ಲೋಟ್, ಬೀದಿನಾಯಿಗಿಂತ ಹೆಚ್ಚಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳೇ ತಿರುಗಾಡ್ತಿದ್ದಾರೆ. “ನಾಯಿಗಳಿಗಿಂತಲೂ ಹೆಚ್ಚಾಗಿ ಜಾರಿ ನಿರ್ದೇಶನಾಲಯವು ದೇಶದಲ್ಲಿ ಓಡಾಡುತ್ತಿದೆ” ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಕಾಯ್ದೆಯ ಅಡಿಯಲ್ಲಿ ಈ ದಾಳಿಗಳನ್ನು ಕೈಗೊಳ್ಳಲಾಗಿದೆ. ಗುರುವಾರವೂ ಸಹ, ಮುಖ್ಯಮಂತ್ರಿ ಗೆಹ್ಲೋಟ್ ಈ ಕ್ರಮವನ್ನು ಖಂಡಿಸಿದರು, ದೇಶದಲ್ಲಿ ಭಯೋತ್ಪಾದನೆಯನ್ನು ತುಂಬಿಸಲಾಗುತ್ತಿದೆ ಎಂದು ಹೇಳಿದರು. ತಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಾಗದ ಕಾರಣ ಬಿಜೆಪಿಯು ಇಂತಹ ದಾಳಿಗಳ ಮೂಲಕ ತನ್ನನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದ್ದಾರೆ.