ಬೆಂಗಳೂರು : ನಿವೃತ್ತಿ ಕೇವಲ ಎರಡು ತಿಂಗಳು ಇರುವಾಗಲೇ ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದ ಪ್ರತಾಪ್ ರೆಡ್ಡಿಯವರ ರಾಜೀನಾಮೆ ನಿರ್ಧಾರದಿಂದ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಲೋಕಸಭೆ ಚುನಾವಣೆಯ ಸನಿಹದಲ್ಲೇ ಈ ರೀತಿಯ ನಿರ್ಧಾರ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ರಾಜೀನಾಮೆ ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಕಮಲ್ ಪಂತ್ ಅವರ ಬಳಿಕ ಪ್ರತಾಪ್ ರೆಡ್ಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು. ಬಳಿಕ ಅವರನ್ನು ವರ್ಗಾವಣೆ ಮಾಡಿ ದಯಾನಂದ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿತ್ತು.