ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ – ಕೇಂದ್ರ ಸರ್ಕಾರಕ್ಕೆ ಸಿಎಂ ಒತ್ತಾಯ

ಬೆಂಗಳೂರು:ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಮುಖ್ಯಮಂತ್ರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

NEET (ನೀಟ್) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‍‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ.

2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ – 67 ವಿದ್ಯಾರ್ಥಿಗಳು ಟಾಪರ್‍ಗಳಾಗಿ ಹೊರಹೊಮ್ಮಿದ್ದಾರೆ.

Advertisement

ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯ ಎನ್ನಿಸುತ್ತದೆ.
ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು.

ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ.
ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, “ಮಾರ್ಕಿಂಗ್ ಪ್ರಕ್ರಿಯೆ” ಮತ್ತು “ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ”ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ?
ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ.
ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ.
“ಎನ್‌ಟಿಎ ಪ್ರಾಸ್ಪೆಕ್ಟಸ್”, “ನೀಟ್ ಬ್ರೋಷರ್” ಮತ್ತು “ಸರ್ಕಾರಿ ಸೂಚನೆಗಳಲ್ಲಿ” ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು.

2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.
ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ.

ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement