ಬೆಂಗಳೂರು: ಸಿದ್ದರಾಮಯ್ಯ ಅವರು ದಲಿತ ನಾಯಕರನ್ನು ಕಡೆಗಣಿಸಿದ್ದಾರೆ. ದಲಿತರನ್ನು ಸಿಎಂ ಮಾಡುವುದನ್ನು ಮರೆತು ಅವರನ್ನು ಕೆಳಗಿಳಿಸಲಾಗಿದೆ. ಕರ್ನಾಟಕದಲ್ಲಿ ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಅವರು, ಸಿಎಂ ಆಗುವ ಎಲ್ಲಾ ಗುಣಗಳನ್ನು ಹೊಂದಿದ್ದರು. ಆದರೆ ಅವರನ್ನು ಕೆಳಗಿಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ಶನಿವಾರ) ನಡೆದ ಬಿಲ್ಲಗ-ಈಡಿಗ ಮತ್ತು ನಾಮಧಾರಿ ಬೆಂಬಲಿಗರ ಶಕ್ತಿ ಪ್ರದರ್ಶನ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರನ್ನು ಹೆಸರಿಸದೆ ತರಾಟೆಗೆ ತೆಗೆದುಕೊಂಡರು. ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಬೇಕಿತ್ತು. ಸತೀಶ್ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬಹುದಿತ್ತು, ಆದರೆ ಚುನಾವಣೆಯ ನಂತರ ಅಂತಹ ಆಲೋಚನೆಗಳು ಅವರ ಮನಸ್ಸಿನಲ್ಲಿ ಇರಲಿಲ್ಲ ಎಂದು ಹರಿಪ್ರಸಾದ್ ಹೇಳಿದರು.