ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಬರುವ ಹಂಗಳ ಹೋಬಳಿಯ ಜಕ್ಕಳಿ ಗ್ರಾಮದಲ್ಲಿನ 1.24 ಎಕರೆ ಇರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಟ ಗಣೇಶ್ ಅವರಿಗೆ ಹೈಕೋರ್ಟ್ ಅನುಮತಿಸಿದೆ. ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶಿಸಿದೆ.
ನಟ ಗಣೇಶ್ ಅವರು ಸಲ್ಲಿಸಿದ್ದ ಮೆಮೊ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿದಾರರು ಕಟ್ಟಡ ನಿರ್ಮಾಣ ಮಾಡಬಹುದು ಎಂದು ತಿಳಿಸಿದೆ.
ಇದಕ್ಕೆ ಪೀಠವು, ಅದೇ ಗ್ರಾಮದಲ್ಲಿ ಬೇರೆಯವರಿಗೆ ಕಟ್ಟಡ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹೇಗೆ ಅನುಮತಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಹೊಸ ದಾಖಲೆಗಳನ್ನು ನೀಡಿದ್ದಾರೆ. ಮೇಲ್ನೋಟಕ್ಕೆ ಅವೆಲ್ಲವೂ ಹೊಸ ಅನುಮತಿಗಳೇ ಆಗಿವೆ. ಹೀಗಾಗಿ, ಅರ್ಜಿದಾರರಿಗೆ ಕಟ್ಟಡ ನಿರ್ಮಾಣ ಮಾಡಲು ಅನುಮತಿ ಇದೆ ಎಂದಿತು.
ಮುಂದುವರಿದು ಪೀಠವು, ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ನೀಡಬೇಕಾದ ಮನವಿಯನ್ನು ಅಡ್ವೊಕೇಟ್ ಜನರಲ್ ಅವರ ಮೂಲಕ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶಿಸಿತು. ಅಲ್ಲದೇ, ಅರ್ಜಿಯ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಿದೆ.