ಕೊಪ್ಪಳ:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.
ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.
ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.
ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:
ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.
ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.