ಬೆಂಗಳೂರು: ರಾಜ್ಯಸಭೆ ಚುನಾವಣೆಯ ಫಲಿತಾಂಶದ ಗೆದ್ದ ಅಭ್ಯರ್ಥಿ ನಾಸಿರ್ ಹುಸೇನ್ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅವರ ಹಿಂದೆ ಇದ್ದವರೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿನ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಜೊತೆಗೆ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಜೊತೆ ಬೆಂಬಲಿಗರಂತೆ ಯಾರು ಯಾರು ಬಂದಿದ್ದರು ಪರಿಶೀಲಿಸಲಾಗುತ್ತಿದೆ.
ವೀಡಿಯೋದ ನೈಜತೆ ಬಗ್ಗೆ ಪೋಲಿಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ. ನಾಸಿರ್ ಹುಸೇನ್ ಜೊತೆ ಇದ್ದವರನ್ನು ಇಂದು ಪೊಲೀಸರು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ವಾಸ್ತವಾಂಶ ಮಾಹಿತಿ ಪಡೆಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ತಯಾರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.