ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಜ್ವಲ್ ರೇವಣ್ಣರ ನಾಲ್ಕು ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು 42ನೇ ಎಸಿಎಂಎಂ ಕೋರ್ಟ್‌ಗೆ ಇಂದು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜುಲೈ 8 ರವರೆಗೆ ಪ್ರಜ್ವಲ್‌ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದಾರೆ.
ಕೋರ್ಟ್ ನಲ್ಲಿ ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 30ರಂದು ನಡೆಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಇನ್ನು ಹೊಳೆನರಸೀಪುರ ಕೇಸ್‌ನಲ್ಲಿ ಪ್ರಜ್ವಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್ 26ರಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿದ್ದರು.
ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇರೆಗೆ ಪ್ರಜ್ವಲ್ ವಿರುದ್ಧ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಜ್ವಲ್ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.