‘ಬಿಜೆಪಿಯವರದ್ದು ಡೋಂಗಿ ಹಿಂದುತ್ವ’ -ಸಿಎಂ ವ್ಯಂಗ್ಯ

ಬೆಂಗಳೂರು: ನೆಹರೂ-ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿ. ಬ್ರಿಟಿಷರನ್ನು ಅಹಿಂಸೆ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು ಎಂದು ವಿವರಿಸಿದರು.

Advertisement

ಬಿಜೆಪಿ, ಜನ ಸಂಘ, RSS ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ RSS ಹುಟ್ಟಿತ್ತು‌. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದರು.

ಹಿಂದೂ ಬೇರೆ-ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಸಿಎಂ ವ್ಯಂಗ್ಯವಾಡಿದರು.ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement