ಚಿತ್ರದುರ್ಗ : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಚಳ್ಳಕೆರೆ ರಸ್ತೆಯಲ್ಲಿರುವ ಎಸ್.ಜಿ. ಕನ್ವೆನ್ಷನ್ ಹಾಲ್ನಲ್ಲಿ ಮಂಗಳವಾರ ನಡೆದ ವೀರಶೈವ ಲಿಂಗಾಯಿತ ಮುಖಂಡರ ಸಭೆ ಉದ್ಘಾಟಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪನವರು ಹತ್ತು ವರ್ಷಗಳ ಕಾಲ ಅತ್ಯುತ್ತಮ ಆಡಳಿತ ನೀಡಿದ ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಅಪ್ಪರ್ಭದ್ರಾ ಯೋಜನೆಗಾಗಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ. ಇಂದಲ್ಲ ನಾಳೆ ಆ ಹಣ ಬಂದೆ ಬರುತ್ತದೆ. ರೈತರಿಗಾಗಿ ಜಾರಿಗೆ ತಂದ ಕಿಸಾನ್ ಸಮ್ಮಾನ್ ಯೋಜನೆಯನ್ನು ರದ್ದುಪಡಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ಹೇಳಿದರು.
ದೇಶದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಜೆಪಿ.ಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ 28 ಕ್ಷೇತ್ರಗಳಲ್ಲಿಯೂ ಸುತ್ತಾಡಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಈ ಶಕ್ತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕಾರ್ಯಕರ್ತರು ಮನೆ ಮನೆಗೆ ಹೋಗಿ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವಿಗೆ ಶ್ರಮಿಸುವಂತೆ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.
ಮಾಜಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ ಗೋವಿಂದ ಕಾರಜೋಳರವರು ಮುದೋಳದಲ್ಲಿ ಯಾವ ರೀತಿ ಅಭಿವೃದ್ದಿಪಡಿಸಿದ್ದಾರೋ ಅದೇ ರೀತಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ಯುತ್ತಾರೆ. ರಾಜ್ಯದಲ್ಲಿ ಬಿಜೆಪಿ. ಸರ್ಕಾರ ಅಧಿಕಾರದಲ್ಲಿದ್ದಾಗ ಅನೇಕ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ ಹಿರಿಯ ರಾಜಕಾರಣಿಯನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸಿಕೊಡಿ ಎಂದು ಕಾರ್ಯಕರ್ತರಲ್ಲಿ ಕೋರಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಲು ಭಗವಂತ ಅವಕಾಶ ಕೊಟ್ಟಿದ್ದಾನೆಂದುಕೊಂಡು ಸ್ಪರ್ಧೆಗಿಳಿದಿದ್ದೇನೆ. ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಿದೆ. ಅಪ್ಪರ್ಭದ್ರಾ ಯೋಜನೆಗಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ತಂದೆ ತರುತ್ತೇನೆ. ಅದಕ್ಕಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಪಾರ್ಲಿಮೆಂಟ್ಗೆ ಕಳಿಸಿಕೊಡಿ ನಿಮ್ಮಗಳ ಪ್ರೀತಿ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕೆಲಸ ಮಾಡುತ್ತೇನೆ. ಮತ್ತೊಮ್ಮೆ ನರೇಂದ್ರಮೋದಿರವರ ಕೈಬಲಪಡಿಸಿ ದೇಶದ ಪ್ರಧಾನಿಯನ್ನಾಗಿಸಿ ಎಂದು ಅಭ್ಯರ್ಥಿ ಗೋವಿಂದ ಕಾರಜೋಳ ವಿನಂತಿಸಿದರು.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಶಾಸಕರುಗಳಾದ ಎಸ್.ಕೆ.ಬಸವರಾಜನ್, ನೇರ್ಲಗುಂಟೆ ತಿಪ್ಪೇಸ್ವಾಮಿ, ಚುನಾವಣೆ ಸಂಚಾಲಕ ಎಸ್.ಲಿಂಗಮೂರ್ತಿ, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಕೆ.ಟಿ.ಕುಮಾರ ಸ್ವಾಮಿ, ಮಾಧುರಿ ಗಿರೀಶ್, ಸುರೇಶ್ ಸಿದ್ದಾಪುರ, ಸಂಪತ್ಕುಮಾರ್, ಬಾಳೆಕಾಯಿ ರಾಂದಾಸ್ ಸೇರಿದಂತೆ ಹಲವು ಮುಖಂಡರುಗಳು ವೇದಿಕೆಯಲ್ಲಿದ್ದರು.