ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿ ಜೈಲುಪಾಲಾಗಿದ್ದ ಹಿಂದುತ್ವಪರ ಭಾಷಣಗಾರ್ತಿ ಚೈತ್ರಾಗೆ ಕೊನೆಗೂ ಜಾಮೀನು ಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ನಲ್ಲಿ ಬಂಧಿತಳಾಗಿದ್ದ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಂಧನವಾದ ಕೆಲ ದಿನಗಳ ಬಳಿಕ ಚೈತ್ರಾ ಸೇರಿದಂತೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಮುಕ್ತಾಯಗೊಳಿಸಿದೆ.
ಇದೀಗ ನ್ಯಾಯಾಲಯವು ಚೈತ್ರಾ ಮತ್ತು ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಎರಡು ಲಕ್ಷ ಬಾಂಡ್ ಪಡೆದು, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೂಚನೆ ನೀಡಿದು ಜಾಮೀನು ಮಂಜೂರು ಮಾಡಲಾಗಿದೆ.
ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್ ನವೆಂಬರ್ 8 ರಂದು ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅರ್ಜಿ ಮಾನ್ಯ ಮಾಡಿತ್ತು. ನವೆಂಬರ್ 11 ರಂದು ಹಾಲಶ್ರೀ ಪರಪ್ಪನ ಅಗ್ರಹಾರದಿಂದ ಹೊರ ಬಂದಿದ್ದರು.