ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಸಂಸದ ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಸದ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ ಸಂಬಂಧ ಇಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಅವರು ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.
ಪ್ರಕರಣ ಸಂಬಂಧ ಜೂನ್ 1 ರಂದು ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಿ ರಾಹುಲ್ ಗಾಂಧಿ ಅವರು ಗೈರಾಗಿದ್ದರು. ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ರಾಹುಲ್ ಗಾಂಧಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆ ಜೂನ್ 7ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.