ಬೀದರ್: ಕಮಲನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರೌಢ ಶಾಲೆಯ ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ 1957ರ ನಿಯಮಗಳನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಸಹ ಶಿಕ್ಷಕ ಮಾಧವರಾವ್ ಮಾಣಿಕರಾವ್ ಮತ್ತು ಹೇಯ ಕೃತ್ಯಕ್ಕೆ ಸಹಕರಿಸಿದ ಶಿಕ್ಷಕಿಯನ್ನು ಸಹ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಅಮಾನತ್ತಿನ ಅವದಿಯಲ್ಲಿ ಕೆಸಿಎಸ್‌ಆರ್ ನಿಯಮದಂತೆ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿದ್ದಾರೆ. ಈ ಅವಧಿಯಲ್ಲಿ ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.