ಬೆಂಗಳೂರು: ಕಾನೂನು ಸುವ್ಯವಸ್ಥೆ ಸರಿ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ ಹಾಗೂ ಡಿಸಿಪಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ಯಾವುದೇ ವ್ಯಕ್ತಿ ಪೊಲೀಸ್ ಠಾಣೆಗೆ ಬಂದರೆ ಆ ವ್ಯಕ್ತಿಗೆ ಧೈರ್ಯ ತುಂಬಿ ನ್ಯಾಯ ಕೊಡಿಸಬೇಕು. ಅನೇಕ ನಗರಗಳಲ್ಲಿ ರೌಡಿಗಳಿದ್ದಾರೆ. ಕಳ್ಳರಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸುವವರಿದ್ದಾರೆ, ಇವೆಲ್ಲಕ್ಕೂ ಪೊಲೀಸರು ಕಡಿವಾಣ ಹಾಕಬೇಕು ಎಂದರು.