ಬೆಂಗಳೂರು : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು. ದೇವರಾಜು ಅರಸು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಕನ್ನಡದಲ್ಲೇ ವ್ಯವಹರಿಸುತ್ತೇವೆಂದು ಪ್ರತಿಜ್ಞೆ ಮಾಡೋಣ ಎಂದರು. ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ, ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ, ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಸಿಎಂ ಹೇಳಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.