ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ನೀರಾವರಿ ಯೋಜನೆ ಯನ್ನಾಗಿ ಘೋಷಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕೇಳಿರುವ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಇಲಾಖೆಯ ರಾಜ್ಯ ಸಚಿವ ಬಿಶ್ವೇಶ್ವರ ತುಡು ಈ ಉತ್ತರ ನೀಡಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಈ ಯೋಜನೆಯು ರಾಷ್ಟ್ರೀಯ ಯೋಜನೆಯಾಗಲು ಅರ್ಹತೆ ಪಡೆದಿದೆ. ಈ ಸಂಬಂಧ ಜಲಶಕ್ತಿ ಸಚಿವಾಲಯದ ಉನ್ನತಾಧಿಕಾರ ಸಮಿತಿ ಸಹ ಶಿಫಾರಸು ಮಾಡಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಹಣಕಾಸು ಸಚಿವಾಲಯದ ಸಾರ್ವಜನಿಕ ಹೂಡಿಕೆ ಮಂಡಳಿಯು 2022ರ ಅಕ್ಟೋಬರ್ 12ರಂದು ಒಪ್ಪಿಗೆ ನೀಡಿದೆ. ಇದಾಗಿ ಎಂಟು ತಿಂಗಳು ಕಳೆದರೂ ಮತ್ತೆ ಯಾವ ಪ್ರಕ್ರಿಯೆಯೂ ನಡೆದಿಲ್ಲ.
ಈ ಯೋಜನೆಯಲ್ಲಿ 29.90 ಟಿಎಂಸಿ ಅಡಿ ನೀರು (ತುಂಗಾ ನದಿಯಿಂದ 17.40 ಟಿಎಂಸಿ ಅಡಿ ಹಾಗೂ ಭದ್ರಾ ಜಲಾಶಯದಿಂದ 12.50 ಟಿಎಂಸಿ ಅಡಿ) ಬಳಕೆ ಮಾಡಲಾಗುತ್ತದೆ. ಈ ಯೋಜನೆ ಮೂಲಕ 367 ಕೆರೆಗಳನ್ನು ತುಂಬಿಸಲಾಗುತ್ತದೆ. 2.25 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ವ್ಯವಸ್ಥೆ ಆಗಲಿದೆ.
ಈ ಯೋಜನೆಗೆ ತಗಲುವ ಒಟ್ಟು ವೆಚ್ಚ ₹16,125 ಕೋಟಿ. ಯೋಜನೆಗೆ ₹5,300 ಕೋಟಿ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು 2023ರ ಕೇಂದ್ರದ ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಈ ಅನುದಾನ ಇಲ್ಲಿಯವರೆಗೆ ಬಿಡುಗಡೆ ಆಗಿಲ್ಲ. !