ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ಅಂಗೀಕರಿಸುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಶಿಫಾರಸ್ಸು ಮಾಡಿದ್ದಾರೆ.
“ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಅವರು ತಮ್ಮ ರಾಜೀನಾಮೆಯನ್ನು ಸಚಿವ ಸಂಪುಟಕ್ಕೆ ಸಲ್ಲಿಸಿದ್ದಾರೆ. ಈ ಕೂಡಲೇ ಅವರ ರಾಜೀನಾಮೆಯನ್ನು ಸ್ವೀಕರಿಸುವಂತೆ ನಾನು ಶಿಫಾರಸ್ಸು ಮಾಡುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಅವರು ಶಿಫಾರಸ್ಸು ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ಗುರುವಾರ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿದ್ದ ಅವರು, ಕಳೆದ 10 ದಿನದಿಂದ ಮಾಧ್ಯಮಗಳಲ್ಲಿ ವರದಿ ಬರುತ್ತಿತ್ತು. ಜನರು ಆತಂಕಗೊಂಡಿದ್ದರು. ವಿಪಕ್ಷಗಳು 10 ದಿನದಿಂದ ಆರೋಪಿಸುತ್ತಿದ್ದರು. ನಾನು ನನ್ನ ಸ್ವ-ನಿರ್ಧಾರದಿಂದ ರಾಜೀನಾಮೆ ಕೊಡುತ್ತಿದ್ದೇನೆ. ನಾನು ನಿರಪರಾಧಿಯಾಗಿದ್ದು ಯಾವುದೇ ಒತ್ತಡಗಳಿಗೆ ಒಳಗಾಗದೇ ಸ್ವಯಂ ಪ್ರೇರಿತನಾಗಿ ರಾಜೀನಾಮೆ ನಿಡುತ್ತಿದ್ದೇನೆ ಎಂದು ತಿಳಿಸಿದ್ದರು.