ಹೊಸಪೇಟೆ: ಸುಪ್ರೀಂಕೋರ್ಟ್ ಆದೇಶದಂತೆ ಹಾಗೂ ಪರಿಸರ ಸಂರಕ್ಷಣೆ ಮಾರ್ಗಸೂಚಿ ಅನ್ವಯ ಗಣೇಶ ಹಬ್ಬ ಆಚರಣೆಗೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಅವರು ನಿರ್ದೇಶಿಸಿದರು.
ಗಣೇಶ ಚತುರ್ಥಿ ಆಚರಣೆ ಅಂಗವಾಗಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸುಪ್ರೀಂಕೋರ್ಟ್ ಆದೇಶದಂತೆ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆ. ಅದೇ ರೀತಿಯಾಗಿ ಪರಿಸರ ಸಂರಕ್ಷಣೆ ಜೊತೆ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಅನ್ವಯ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಮಯದಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಅದರಲ್ಲೂ ಪ್ರಮುಖವಾಗಿ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಹೆಚ್ಚಿನ ಭದ್ರತೆ ಹಾಗೂ ಮೆರವಣಿಗೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಬಂದೋಬಸ್ತ್ ಹಾಗೂ ಇತರ ವ್ಯವಸ್ಥೆ ಒದಗಿಲು ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚು ನಿಗಾ ವಹಿಸಬೇಕು ಎಂದು ತಿಳಿಸಿದರು.
ಮೆರವಣಿಗೆ ಸಮಯದಲ್ಲಿ ಜೊತೆಗೆ ವಿಸರ್ಜನೆ ವೇಳೆಯಲ್ಲಿ ಸೂಕ್ತ ವಿದ್ಯುತ್ ವ್ಯವಸ್ಥೆ ಹಾಗೂ ಬಂದೋಬಸ್ತ್ ಕಲ್ಪಿಸಬೇಕು. ವಿಸರ್ಜನಾ ಸ್ಥಳಗಳಲ್ಲಿ ವಿದ್ಯುತ್ ವ್ಯವಸ್ಥೆ, ಸಿಸಿ ಕ್ಯಾಮೆರಾ ಅಳವಡಿಕೆ, ಬ್ಯಾರಿಕೇಡ್ ಜೊತೆಗೆ ಬಂದೋಬಸ್ತ್ ವ್ಯವಸ್ಥೆ ಇರುವಂತೆ ಗಮನಹರಿಸಬೇಕು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಉಪವಿಭಾಗಾಧಿಕಾರಿ ನೋಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಸೇರಿದಂತೆ ಡಿವೈಎಸ್ಪಿ ಮಂಜುನಾಥ್ ಟಿ. ಉಪಸ್ಥಿತರಿದ್ದರು.