ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಹಗರಣ ಕುರಿತ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಎತ್ತಿಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರ, ರಾಜ್ಯಪಾಲರ ಕಚೇರಿಯ ಕಾರ್ಯದರ್ಶಿ, ಖಾಸಗಿ ದೂರುದಾರ ಟಿ.ಜೆ. ಅಬ್ರಹಾಂ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಲಾಗಿದೆ. ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸುವಂತೆ ಸಿಎಂ ಮನವಿ ಮಾಡಿದ್ದಾರೆ.
