ಬೆಂಗಳೂರು: ಸಚಿವರು ಸಿಎಂ ಕುರ್ಚಿಗೆ ಟವೆಲ್ ಹಾಕುವುದು, ಹೈಕಮಾಂಡ್ ಭೇಟಿಯಾಗುವುದನ್ನು ಬಿಟ್ಟು ರಾಜ್ಯ, ಜಿಲ್ಲಾ ಪ್ರವಾಸ ಮಾಡಿ ಅಭಿವೃದ್ಧಿ ಕಡೆ ಒತ್ತು ಕೊಡಬೇಕು. ಈ ಸರ್ಕಾರದಲ್ಲಿ ಹೇಗೆ ಆಗಿದೆ ಅಂದ್ರೆ ಯಾರದೋ ಮದುವೆಯಲ್ಲಿ ಉಂಡವನೇ ಜಾಣ ಎಂಬ ಸ್ಥಿತಿಯನ್ನು ಕಾಂಗ್ರೆಸ್ ನಿರ್ಮಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಟೀಕಿಸಿದ್ದಾರೆ. ಸಿದ್ದರಾಮಯ್ಯನವರು ಜಗ್ಗಲ್ಲ, ಬಗ್ಗಲ್ಲ ಎನ್ನುತ್ತಿದ್ದವರು ಆತ್ಮಸಾಕ್ಷಿಯ ಬಗ್ಗೆ ಮಾತನಾಡುತ್ತಿದ್ದು, ಅವರ ಕುರ್ಚಿ ಅಲುಗಾಡುತ್ತಿರುವುದನ್ನು ಅದು ತೋರಿಸುತ್ತದೆ ಎಂದರು. ರಾಜ್ಯದ ಅಭಿವೃದ್ಧಿ ಬಗ್ಗೆ ಒತ್ತು ಕೊಡಬೇಕಾದ ಸಚಿವರು ತಮ್ಮ ನಾಯಕರ ಭೇಟಿ ಕಾರ್ಯಕ್ರಮ (ಲೀಡರ್ ರನ್ ಪ್ರೋಗ್ರಾಮ್) ಇಟ್ಟುಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಡಾ. ಪರಮೇಶ್ವರ್, ಎಚ್.ಸಿ. ಮಹದೇವಪ್ಪ ಅವರು ಕುರ್ಚಿ ಮೇಲೆ ಟವೆಲ್ ಹಾಕಲು ಪ್ರಯತ್ನ ಮಾಡುತ್ತಿರುವುದು, ಇವೆಲ್ಲವೂ ಕಾಂಗ್ರೆಸ್ಸಿನಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವ ಬದಲಾವಣೆ ಬೇಕಿದ್ದರೂ ಆಗಬಹುದು ಎಂಬುದರ ಸೂಚನೆ ಎಂದರು. ಅಭಿವೃದ್ಧಿ ಸಂಪೂರ್ಣ ನೆಲಕಚ್ಚಿ ಹೋಗಿರುವುದು ಈ ರಾಜ್ಯದ ಜನರ ದುರದೃಷ್ಟ. ಸಚಿವರು ತಮ್ಮ ಆಕಾಂಕ್ಷೆ ವ್ಯಕ್ತಪಡಿಸುವುದರಲ್ಲಿ, ಅದಕ್ಕೆ ಒಳಸಂಚು ರೂಪಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಆರೋಪಿಸಿದರು.
