ಚಿಕ್ಕಮಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ, ಡಿ.ಬಿ.ಚಂದ್ರೇಗೌಡ ಅವರು (87) ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಮಧ್ಯರಾತ್ರಿ ವೇಳೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂರು ಬಾರಿ ಶಾಸಕರಾಗಿ, 3ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡರು ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರು ಹಾಗೂ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.
1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸುವ ಸಂದರ್ಭ ಬಂದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾಗಾಂಧಿ ಅವರ ಗೆಲುವಿಗೆ ಶ್ರಮಿಸುವ ಮೂಲಕ ದೇಶದ ಗಮನಸೆಳೆದಿದ್ದರು.
ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ, ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.ಇವರ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.