ಬೆಂಗಳೂರು:ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಟೀಕಿಸಿದರು.
ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಹೊಂಡಗುಂಡಿಯಲ್ಲಿ ಬಿದ್ದು ಸಾಯುವ ಭಯದಿಂದ ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲವಾಗಿದೆ ಎಂದು ಆತಂಕದಿಂದ ನುಡಿದರು.
ನಿನ್ನೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ರಾಜ್ಯದ ಎಲ್ಲ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿರುವುದು ಗೊತ್ತಿದೆ. ಅಧಿಕಾರಿಗಳ ಪರವಾಗಿ ಬಿಜೆಪಿ ಇದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳದಿರಿ ಎಂದು ಮನವಿ ಮಾಡಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಒಂದು ವರ್ಷವಾದರೂ ಒಂದು ರೂಪಾಯಿ ಹಣವನ್ನು ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು.
ರಾಜ್ಯದ ಶೇ 60ರಿಂದ 65 ತೆರಿಗೆ ಬೆಂಗಳೂರಿಂದ ಸಂಗ್ರಹವಾಗುತ್ತಿದೆ. ಸಿದ್ದರಾಮಯ್ಯನವರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬೆಂಗಳೂರಿನ ಜನತೆ ಬೆಂಗಳೂರಿನ ತೆರಿಗೆ ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಲು ಸಿದ್ಧರಾಗುವಂತಾಗಿದೆ ಎಂದು ತಿಳಿಸಿದರು.
ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಮಾತನಾಡಿ, ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.ಈ ಪ್ರತಿಭಟನೆ ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ ಗಂಟೆ ಎಂದು ಅವರು ತಿಳಿಸಿದರು.