ಬೆಂಗಳೂರು:ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಮತ್ತಿಬ್ಬರನ್ನು ಎನ್‌ಐಎ ವಶಕ್ಕೆ ಪಡೆದಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯದ ಹಲವೆಡೆ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಇರಬಹುದು ಎನ್ನಲಾಗಿದೆ. ಹೀಗಾಗಿ ಹಳೇ ಪ್ರಕರಣಗಳಲ್ಲಿ ಭಾಗಿಯಾದ ಹಲವರ ಮೇಲೆ ಎನ್ಐಎ ನಿಗಾವಹಿಸಿದೆ.
ಶಂಕಿತರಿಗೆ ನೆರವು ನೀಡಿದವರ ಮೇಲೆ ಎನ್ಐಎ ಕಣ್ಣಿಟ್ಟಿದ್ದು, ಅಂಥವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತಿದೆ. ಅನುಮಾನಸ್ಪದ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ಆದ್ದರಿಂದ ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಆ ಮೂಲಕ ಸ್ಫೋಟ ನಡೆಸಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.