ದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 4 ಲಕ್ಷ ಮತಗಳ ಅಂತರದಿಂದ ಭಾರೀ ಗೆಲುವು ಸಾಧಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಭರ್ಜರಿ ಮತಗಳ ಅಂತರದಿಂದ ಗೆಲ್ಲುವ ಮೂಲಕ ತಮ್ಮ ತಾಯಿ ಸೋನಿಯಾ ಗಾಂಧಿ 2019ರಲ್ಲಿ ಗಳಿಸಿದ ಗೆಲುವಿನ ಅಂತರವನ್ನು ಮೀರಿಸಿದ್ದಾರೆ. ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿರುವ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಸೋಲಿಸುವ ಮೂಲಕ ರಾಹುಲ್ ಗಾಂಧಿ ಅವರು ಗೆಲುವಿನ ನಗೆ ಬೀರಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತದಿಂದ ನಿಂತಿದ್ದ ಸೋನಿಯಾ ಗಾಂಧಿ ಅವರು ಸಿಂಗ್ ವಿರುದ್ಧ 1.67 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಸೋನಿಯಾ ಗಾಂಧಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಿಂದ ಹೊರಗುಳಿದಿದ್ದರು. ಈ ಬಾರಿ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಅವರು ಸ್ಪರ್ಧಿಸಿದ್ದು, ಇದೀಗ ಗೆಲುವಿನ ಪತಾಕೆ ಹಾರಿಸಿದ್ದಾರೆ.