ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ. ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತ್ತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.
