ಜೈಪುರ: ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ‘ ರಾವಣ’ ಎಂದು ಬಿಂಬಿಸುವ ಫೋಸ್ಟರ್ ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ಮೆಟ್ಟಿಲೇರಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 499 (ಇನ್ನೊಬ್ಬ ವ್ಯಕ್ತಿಯ ವಿರುದ್ಧ ಸುಳ್ಳು ಆರೋಪ), 500 (ಮಾನನಷ್ಟ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ರಾಜಸ್ಥಾನ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಜಸ್ವಂತ್ ಗುರ್ಜರ್ ಅವರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಗುರ್ಜರ್ ಜೈಪುರ ಮೆಟ್ರೋಪಾಲಿಟನ್ ಕೋರ್ಟ್-11 ರಲ್ಲಿ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 9 ರಂದು ವಾದ ಆಲಿಸಲು ನ್ಯಾಯಾಲಯ ನಿರ್ಧರಿಸಿದೆ. ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಲಾದ ಪೋಸ್ಟರ್‌ನಲ್ಲಿ ರಾವಣನಂತೆ ಬಿಂಬಿಸುವ ರಾಹುಲ್ ಗಾಂಧಿ ಫೋಟೋ ವಿವಾದವನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಕಾರಣವಾಗಿದೆ. ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದ್ದು, ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 9 ರಂದು ನಿಗದಿಪಡಿಸಲಾಗಿದೆ ಎಂದು ಗುರ್ಜರ್ ಹೇಳಿದ್ದಾರೆ.
ಅಕ್ಟೋಬರ್ 5 ರಂದು ಬಿಜೆಪಿ ಫೋಸ್ಟರ್ ಫೋಸ್ಟ್ ಮಾಡಿದೆ. ಕಾಂಗ್ರೆಸ್ ಮತ್ತು ಅದಕ್ಕೆ ಸಂಬಂಧಿಸಿದ ಜನರ ಅಭಿಮಾನವನ್ನು ಅವಮಾನಿಸುವುದು ಮತ್ತು ಹಾನಿ ಮಾಡುವುದು ಮತ್ತು ರಾಜಕೀಯ ಲಾಭ ಗಳಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಆರೋಪಿಗಳಿಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಅರ್ಜಿದಾರರು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.