ಧಾರವಾಡ : ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ವಾಹನ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಕುರಿತು ಕೆಎಸ್‌ಆರ್‌ಟಿಸಿ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.
ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕ ಹನುಮಂತಪ್ಪ ಕಿಲ್ಲೇದಾರ, ನಿರ್ವಾಹಕರಾಗಿದ್ದ ಅನಿತಾ ಎಚ್. ಬಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದ ಆ ಸಮಯದಲ್ಲಿ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆ ಹಿಡಿದುಕೊಂಡು ವಾಹನ ಚಾಲನೆ ಮಾಡಿದ್ದಾರೆ.
ವಾಹನದ ಛಾವಣಿ ಸೋರಿಕೆಯಾಗಿಲ್ಲ. ಇನ್ನು ಬಸ್ ಸೋರುವ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲಾಗಿಲ್ಲ. ಈ ಕುರಿತು ಚಾಲನಾ ಸಿಬ್ಬಂದಿಗಳಿಂದ ಸ್ಪಷ್ಟೀಕರಣ ಪಡೆಯಲಾಗಿದ್ದು ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟೀಕರಣ ನೀಡಿದ್ದಾರೆ. ಬಳಿಕ ಚಾಲಕ ಮತ್ತು ನಿರ್ವಾಹಕರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.