ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಮತ್ತು ಬುಧವಾರ ಮಧ್ಯಾಹ್ನದವರೆಗೆ ಧಾರಾಕಾರ ಮಳೆಯಾಗಿದೆ. ಇನ್ನು ನಾಲ್ಕು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 5 ದಿನ ಹಾಗೂ ಬೆಳಗಾವಿ, ಧಾರವಾಡದಲ್ಲಿ ಮೇ 22 ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ವಿಜಯಪುರ, ಕೋಲಾರದಲ್ಲಿ ಮುಂದಿನ 24 ಗಂಟೆಗಳ ಕಾಲ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಗದಗ, ಹಾವೇರಿಯಲ್ಲಿ ಮೇ 24ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲು ಮುಂದಿನ ನಾಲ್ಕು ದಿನ ಅನುಕೂಲ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.