ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಹಿಂದೆ ಕೇವಲ ಬಿ.ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಪ್ರಕರಣದ ಮೊದಲ ಆರೋಪಿಯಾಗಿದ್ದು, ಕೂಡಲೇ ಸಿಎಂ ಸ್ಥಾನಕ್ಕೆ ಅವರು ರಾಜೀನಾಮೆ ಕೊಡಬೇಕು ಎಂದರು. ಕಾಂಗ್ರೆಸ್ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದು ಆರ್.ಅಶೋಕ್ ಅವರು ಹೇಳಿದರು. ಈ ಹಗರಣದಲ್ಲಿ ನಾಗೇಂದ್ರ ಜೊತೆಗೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಅವರು ಕೂಡ ರಾಜೀನಾಮೆ ನೀಡಬೇಕು ಅಂತಾ ಪ್ರತಿಪಕ್ಷ ನಾಯಕ ಅಶೋಕ್ ಅವರು ಗುಡುಗಿದರು.