ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು 60 ರಿಂದ 65 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ವೈದ್ಯರ ನಿವೃತ್ತಿ ವಯಸ್ಸು 5 ವರ್ಷ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಸೂಪರ್ ಸ್ಪೆಷಾಲಿಟಿ ವೈದ್ಯರ ಕೊರತೆ ಇರುವ ಕಾರಣ ಅವರ ವಯೋಮಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯರ ಹುದ್ದೆ 500 ಇದ್ದು, 250 ಮಂದಿ ಮಾತ್ರ ಕೆಲಸದಲ್ಲಿದ್ದಾರೆ. ಇವರಲ್ಲಿ 50 ಮಂದಿ ನಿವೃತ್ತಿ ಅಂಚಿನಲ್ಲಿದ್ದಾರೆ. ಅವರ ನಿವೃತ್ತಿ ನಂತರ ಆ ಹುದ್ದೆ ಖಾಲಿ ಇರಲಿವೆ. ಸೂಪರ್ ಸ್ಪೆಷಾಲಿಟಿ ವೈದ್ಯರ ಅಗತ್ಯ ಇರುವ ಕಾರಣ ಅವರ ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.