ಲಕ್ನೋ: ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು 11 ನವಜಾತ ಶಿಶುಗಳು ಬೆಂಕಿಗಾಹುತಿಯಾದ ದಾರುಣ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಈ ಭೀಕರ ಬೆಂಕಿ ಅಪಘಾತದಲ್ಲಿ ಸುಮಾರು 11 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ಮಕ್ಕಳ ವಾರ್ಡ್‌ನ ಕಿಟಕಿ ಒಡೆದು ಹಲವು ಕಂದಮ್ಮಗಳನ್ನು ರಕ್ಷಿಸಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.
ಅಪಘಾತದ ಸಮಯದಲ್ಲಿ ಸುಮಾರು 54 ನವಜಾತ ಮಕ್ಕಳನ್ನು NICU ವಾರ್ಡ್‌ನಲ್ಲಿ ದಾಖಲಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಸಿರುವ ಜಿಲ್ಲಾಧಿಕಾರಿ ಅವಿನಾಶ್ ಕುಮಾರ್, ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದೆ. ಈ ಅವಘಡದಲ್ಲಿ 11 ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 40 ಶಿಶುಗಳನ್ನು ಉಳಿಸಲಾಗಿದೆ. ಈ ಪೈಕಿ 16ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಿಗಾ ವಹಿಸಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ ಮಕ್ಕಳ ವಯಸ್ಸು ಒಂದು ದಿನದಿಂದ ಒಂದು ತಿಂಗಳವರೆಗೆ ಇದೆ ಎಂದು ಹೇಳಿದರು.