ಬೆಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರವು ಸ್ವಾಭಿಮಾನದ ಪ್ರತೀಕ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು.
ಮಲ್ಲೇಶ್ವರದ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲ ಬಿಜೆಪಿ ಕಾರ್ಯಕರ್ತರು, ರಾಮಭಕ್ತರು ಎಲ್ಲ ದೇಗುಲಗಳು, ಮಂದಿರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ ಎಂದರಲ್ಲದೆ, ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.
ಅಯೋಧ್ಯೆ ಶ್ರೀರಾಮಮಂದಿರ ಪುನರ್ ನಿರ್ಮಾಣ ಆಗಿ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಹಬ್ಬದ ವಾತಾರವಣ ಇದೆ ಎಂದು ತಿಳಿಸಿದರು.
500 ವರ್ಷಗಳ ಕಾಲ ನಾವು ಅನ್ಯಾಯಕ್ಕೆ ಒಳಗಾಗಿದ್ದೆವು. ಎಲ್ಲ ಭಾರತೀಯರು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಇತರ ಪಕ್ಷಗಳು ತಮ್ಮ ಕಾರ್ಯಕ್ರಮಗಳನ್ನು ಜನವರಿ 22ರ ಬಳಿಕ ಮಾಡಿದ್ದರೆ ಚೆನ್ನಾಗಿತ್ತು. ಇದಕ್ಕೆ ಜನತೆ ಸೂಕ್ತ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಭಾಷೆ ಮೇಲೆ ಹಿಡಿತ ಇರಬೇಕು. ಸಮಾಧಾನದಿಂದ ಎಲ್ಲರಿಗೂ ಗೌರವ ನೀಡುವುದು ನಮ್ಮ ಸಂಸ್ಕಂತಿ ಆಗಿರಬೇಕು. ತಪ್ಪಾದಾಗ ಅದನ್ನು ಸರಿಪಡಿಸುವುದು ಪ್ರತಿಯೊಬ್ಬರ ಕರ್ತವ್ಯ. ಮೊದಲು ಏಕವಚನ ಬಳಕೆಗೆ ಸಂಬಂಧಿಸಿ ಮುಖ್ಯಮಂತ್ರಿಯವರು ತಮ್ಮ ಮೇಲೆ ಕೇಸು ಹಾಕಿಸಿ ನಂತರ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕೇಸು ಹಾಕಲು ಹೇಳಬೇಕು ಎಂದರು.