ಬೆಂಗಳೂರು : ಮುಂದಿನ ಆರು ತಿಂಗಳಲ್ಲಿ ಎಲ್ಲ ಇಲಾಖೆಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಹೈಕೋರ್ಟ್, ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಅಲ್ಲದೆ, ಸಮಾಜದ ಶೋಷಿತ ಸಮುದಾಯಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರಕಾರಿ ಸೇವೆಯಲ್ಲಿ ಸಮುದಾಯದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಅಭಿಪ್ರಾಯಪಟ್ಟಿದೆ.
ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ. ಮಂಜುನಾಥ್ ಪ್ರಸಾದ್ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ಮಾಡಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದಲಿತ ಸಮುದಾಯಗಳಿಗೆ ಮೀಸಲಾಗಿರುವ ಹುದ್ದೆಗಳನ್ನುತಪ್ಪದೇ ಭರ್ತಿ ಮಾಡಬೇಕು. ಭರ್ತಿ ಮಾಡದೆ ಖಾಲಿ ಉಳಿಸುವುದುಕೊಳ್ಳುವುದು ಸಂವಿಧಾನವು ಈ ಸಮುದಾಯಗಳಿಗೆ ಕಲ್ಪಿಸಿರುವ ಸೌಲಭ್ಯಗಳನ್ನು ನಿರಾಕರಿಸಿದಂತೆ ಆಗುತ್ತದೆ.ಆದ್ದರಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್ ಲಾಕ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.