ಬೆಂಗಳೂರು: ಏಳನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಪರಿಷ್ಕೃತ ವೇತನ ಶ್ರೇಣಿ ಆಗಸ್ಟ್ 1ರಿಂದ ನೌಕರರಿಗೆ ಸಿಗಲಿದೆ.
ಪರಿಷ್ಕೃತ ವೇತನ ಶ್ರೇಣಿ ಜಾರಿ ಮಾಡದೇ ಇದ್ದರೆ ಇದೇ ತಿಂಗಳ 29ರ ಬಳಿಕ ಕೆಲಸ ಸ್ಥಗಿತದ ಮುಷ್ಕರ ನಡೆಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಎಚ್ಚರಿಸಿತ್ತು. ಅಲ್ಲದೇ, ಎರಡು ಹಂತಗಳಲ್ಲಿ ಪ್ರತಿಭಟನೆಯನ್ನೂ ನಡೆಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ, ಸೋಮವಾರ ನಡೆದ ಸಚಿವ ಸಂಪುಟ ಸಭೆ ವೇತನ ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿದೆ.
ವೇತನ ಪರಿಷ್ಕರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಏಳನೇ ವೇತನ ಆಯೋಗವನ್ನು ಸರ್ಕಾರ ರಚಿಸಿತ್ತು. ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್ಮೆಂಟ್ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು. 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇ 17ರಷ್ಟು ಮಧ್ಯಂತರ ಪರಿಹಾರ ನೀಡುವ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೈಗೊಂಡಿತ್ತು. ಬಾಕಿ ಉಳಿದಿರುವ ಶೇ 10.50ರಷ್ಟು ನೀಡಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.