ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದು, ಚಿತ್ರದುರ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿದಂತೆ ಬೇರೆ ಬೆರೆ ಜಿಲ್ಲೆಗಳಿಂದ ಲಕ್ಷಾಂತರ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.
2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೊಮಾ ತೇರ್ಗಡೆ ಹೊಂದಿದ ನಿರುದ್ಯೋಗಿಗಳು ಯೋಜನೆಗೆ ಅರ್ಹರಾಗಿದ್ದು, ಒಟ್ಟು 5.29 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನವಾಗಲಿದೆ.