ಬೆಂಗಳೂರು : ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅಶೋಕ್ ಕಿಡಿಕಾರಿದರು.
ರಾಜ್ಯದಲ್ಲಿ ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಬೇಕು. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇತ್ತೇ ಎಂದು ತಿಳಿಸಬೇಕು. ಈಗ ರೈತರು ಕಂಗಾಲಾಗಿದ್ದಾರೆ. ಹಿಂದೂಗಳಿಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡು ಜನರಿಗೆ ಸೂಕ್ತ ಮಾಹಿತಿ ಹಾಗೂ ಸ್ಪಷ್ಟೀಕರಣ ನೀಡಬೇಕು ಎಂದರು.