ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಅವರನ್ನು ಶನಿವಾರ ಸಂಜೆ ಎಸ್ಐಟಿ ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಸಹೋದರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಖಾಸಗಿ ಹೋಟೆಲ್ನಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ.
ರೇವಣ್ಣ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ ಮಧ್ಯಾಹ್ನ ಆರಂಭವಾಗುತ್ತಿದ್ದಂತೆ ನಗರದ ಖಾಸಗಿ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ ಕುಮಾರಸ್ವಾಮಿ ಪ್ರಕರಣದ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಇದೇ ವೇಳೆ ಮಾಜಿ ಸಚಿವರಾದ ಜಿ.ಟಿ. ದೇವೇಗೌಡ, ಸಿ.ಎಸ್. ಪುಟ್ಟರಾಜು, ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರ ಕೆಲವು ಆಪ್ತರ ಜತೆಗೆ ಕುಮಾರಸ್ವಾಮಿ ರಹಸ್ಯ ಮಾತುಕತೆ ನಡೆಸಿದರು.