ಚಿತ್ರದುರ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದಲ್ಲಿ ಎರಡು ದಿನಗಳ ಕಾಲ ನಡೆಸಿದ ಸಿ.ಇ.ಟಿ. ಪರೀಕ್ಷೆಯಲ್ಲಿ ಎರಡು ಕಡೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಬೀದರ್ನ ಸ್ಥಾಯಿ ಸ್ಪೂರ್ತಿ ಪರೀಕ್ಷಾ ಕೇಂದ್ರ ಹಾಗೂ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳು ಧಾರ್ಮಿಕ ಆಚರಣೆಗೆ ಅವಮಾನ ಮಾಡಿದ್ದಾರೆ. ತಪ್ಪಿತಸ್ಥರ ಮೇಲೆ ಕೂಡಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯದಲ್ಲಿ 45 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಬ್ರಾಹ್ಮಣರಿದ್ದರೂ ಕೇವಲ ಹತ್ತು ಲಕ್ಷ ಎಂದು ಜಾತಿ ಗಣತಿಯಲ್ಲಿ ಲೆಕ್ಕ ತೋರಿಸಿ ಬ್ರಾಹ್ಮಣ ಜನಾಂಗವನ್ನು ನಿರ್ಲಕ್ಷಿಸುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಈ ಜಾತಿ ಸಮೀಕ್ಷೆಯನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಸಂಭವಿಸದಂತೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಟಿ.ಕೆ.ನಾಗರಾಜರಾವ್, ಡಾ.ರಾಜೀವಲೋಚನ, ಮಾರುತಿ ಮೋಹನ್, ಸುಭಾಷ್, ನವೀನ್ಕುಮಾರ್, ವೆಂಕಟೇಶ್ ದೀಕ್ಷಿತ್, ಲಕ್ಷ್ಮಿ, ಶಶಿರೇಖಾ, ಶೃತಿ, ಪಲ್ಲವಿ, ಮಂಜುನಾಥ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.