ಬೆಂಗಳೂರು : ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣದ ತನಿಖೆಯನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಹಾಸನದ ಹೊಳೇನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನ ಬಂಧಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಕಾನೂನು – ಸುವ್ಯವಸ್ಥೆಯ ಎಡಿಜಿಪಿ ಆರ್.ಹಿತೇಂದ್ರ ಆದೇಶಿಸಿದ್ದಾರೆ. ಪ್ರಕರಣದ ಇದುವರೆಗಿನ ತನಿಖಾ ವರದಿಯನ್ನ ಸಿಐಡಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸುವಂತೆ ಸೂಚಿಸಲಾಗಿದ್ದು, ಅಗತ್ಯ ತನಿಖಾ ತಂಡವನ್ನ ರಚಿಸುವಂತೆ ಸಿಐಡಿಯ ಆರ್ಥಿಕ ಅಪರಾಧ ಮತ್ತು ವಿಶೇಷ ತನಿಖಾದಳದ ಡಿಜಿಪಿಗೆ ನಿರ್ದೇಶಿಸಲಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತ ಯುವಕ ನೀಡಿದ್ದ ದೂರಿನನ್ವಯ ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.