ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ, ಸ್ಥಳೀಯವಾಗಿ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮಾಡಲು ಸರ್ಕಾರದ ಸೂಚನೆಯಂತೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆಯ ಕೊರತೆಯ ಕಾರಣ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಈಗಾಗಲೆ ಸರ್ಕಾರ ಘೋಷಣೆ ಮಾಡಿದೆ. ಬರದ ಕಾರಣ ಜಾನುವಾರುಗಳಿಗೆ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯಾಗುವ ಸಾಧ್ಯತೆ ಇರುವುದರಿಂದ, ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸಿ, ತಕ್ಷಣದಿಂದಲೇ. ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವುವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ನಿಬರ್ಂಧಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಹೀಗಾಗಿ ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವನ್ನು ರೈತರಿಗೆ ಒದಗಿಸಬೇಕಾಗಿರುವುದರಿಂದ, ಜಿಲ್ಲೆಯಲ್ಲಿ ಲಭ್ಯವಿರುವ ಮೇವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ನಿರ್ಬಂಧಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಈಗಾಗಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ, ತಹಸಿಲ್ದಾರರಿಗೆ, ಉಪವಿಭಾಗಾಧಿಕಾರಿಗಳಿಗೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ತಿಳಿಸಿದ್ದಾರೆ.