ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್ ಮಂಡಿಸುತ್ತಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು, ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದರು.
‘ರಾಜ್ಯ ಬಜೆಟ್ 2023-24ರ’ ಮುಖ್ಯಾಂಶಗಳು- ವಿವಿಧ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ಘೋಷಣೆ
ಇನ್ನು ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.