ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿದೆ.
ಮೊದಲ ಬಾರಿ ನಡೆದ ವರ್ಗಾವಣೆಯ ಪ್ರಯೋಜನವನ್ನು ರಾಜ್ಯದ ಸರ್ಕಾರಿ ಶಾಲೆಗಳ 30,629 ಶಿಕ್ಷಕರು ಪಡೆದಿದ್ದರು. ಶಿಕ್ಷಕರ ವರ್ಗಾವಣೆ ನಂತರ ತೆರವಾದ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮತಿ ಕೋರಿ ಶಾಲಾ ಶಿಕ್ಷಣ ಇಲಾಖೆ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು. 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ.
ಇದೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 35 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿತ್ತು. ಹೊಸ ಸ್ಥಳಗಳಿಗೆ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ನಂತರ ಉತ್ತರ ಕರ್ನಾಟಕ, ಮಲೆನಾಡು ಭಾಗ ಸೇರಿದಂತೆ ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗಿತ್ತು.