ಉತ್ತರ ಪ್ರದೇಶ : ಉನ್ನಾವ್ ಜಿಲ್ಲೆಯ ಆಗ್ರಾ – ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಪಲ್ಟಿಯಾಗಿ ಕನಿಷ್ಠ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಸನ್ಪುರ ಪ್ರದೇಶದ ಬಳಿ ಬುಧವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು, ಘಟನೆಯ ಬಗ್ಗೆ ಹಸನ್ಗಂಜ್ ವೃತ್ತಾಧಿಕಾರಿ ಅರವಿಂದ್ ಕುಮಾರ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಸುಮಾರು 60 ಪ್ರಯಾಣಿಕರನ್ನು ಹೊತ್ತ ಬಸ್ ಆಗ್ರಾದಿಂದ ಲಕ್ನೋ ಕಡೆಗೆ ತೆರಳುತ್ತಿದ್ದ ವೇಳೆ ತರಕಾರಿಗಳನ್ನು ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ತಿಳಿಸಿದ್ದಾರೆ.
ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ವಾಹನದ ವೇಗ ಹಾಗೂ ನಿರ್ಲಕ್ಷ್ಯ ಚಾಲನೆ ಕಾರಣವೇ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

































