ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಮಾರ್ಕೆಟ್ ಠಾಣೆಯಲ್ಲಿ ಐಪಿಸಿ ಕಲಂ 143, 147, 149, 341, 283, ಮತ್ತು 448 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡುತ್ತಿಲ್ಲ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನೂ ಕಡಿತಗೊಳಿಸಲಾಗಿದೆ. ಪೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಬೆಳಗಾವಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಇದೀಗ ಎಫ್‌ಐಆರ್ ದಾಖಲಿಸಿದ್ದಾರೆ.
ಬೆಳಗಾವಿ ನಗರ ಬಿಜೆಪಿ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ 27 ಜನರ ವಿರುದ್ಧ ಕಾಂಗ್ರೆಸ್ ಸದನಕ್ಕೆ ಅತಿಕ್ರಮ ಪ್ರವೇಶ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
				
															
                    
                    
                    
                    
                    































