ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.
