ಬೆಂಗಳೂರು: 2023ನೇ ಸಾಲಿನ ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಈ ಬಾರಿ 68 ಸಾಧಕರು ಮತ್ತು 10 ಸಂಘ ಸಂಸ್ಥೆ ಆಯ್ಕೆಯಾಗಿದ್ದು ಮಂಗಳವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.
ಈ ಬಾರಿ 68ನೇ ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಪ್ರಶಸ್ತಿಗೆ 68 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಎಂದು ನಾಮಕರಣ ಮಾಡಿ ಐವತ್ತು ವರ್ಷವಾಗಿರುವ ಸುವರ್ಣ ಸಂಭ್ರಮದ ನೆನಪಿನಲ್ಲಿ 10 ಸಂಘ ಸಂಸ್ಥೆಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಈ ಬಾರಿ 3,523 ಅರ್ಜಿ ಹಾಗೂ ಒಟ್ಟು 26,555 ಶಿಫಾರಸು ಪತ್ರ ಬಂದಿದ್ದು, ಅಂತಿಮವಾಗಿ 68 ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.
ನ.1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.