ಗಾಂಧಿನಗರ: ಗುಜರಾತ್ನ ಜುನಾಗಢದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಒಂದು ಕಾರಿನಲ್ಲಿ ಕಾಲೇಜಿಗೆ ಹೋಗುತ್ತಿದ್ದರೆ, ಇನ್ನಿಬ್ಬರು ಬಲಿಪಶುಗಳು ಎರಡನೇ ಕಾರಿನಲ್ಲಿದ್ದರು. ಜುನಾಗಢ-ಸೋಮನಾಥ ಹೆದ್ದಾರಿಯ ಭಂಡೂರಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ಬೆನ್ನಲ್ಲೇ ಸ್ಥಳದಲ್ಲಿ ಜಮಾಯಿಸಿ ಸ್ಥಳೀಯ ನಿವಾಸಿಗಳು ಪೊಲೀಸ್ ಮತ್ತು ತುರ್ತು ಸೇವೆಗಳಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದೊಂದಿಗೆ ಪೊಲೀಸರು ಮತ್ತು ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಘರ್ಷಣೆಯಿಂದಾಗಿ ಹೊತ್ತಿಕೊಂಡ ಬೆಂಕಿಯನ್ನು ಅಗ್ನಿಶಾಮಕ ದಳ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಪಘಾತದ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
